ಮೈಸೂರು: ಜು .31 ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಮಾಹಿತಿ ನೀಡಿದರು .
ಮೈಸೂರಿನ ಕಾಂಗ್ರೆಸ್ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶನಿವಾರ ಮೈಸೂರಿಗೆ ಆಗಮಿಸಲಿರುವ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮೈಸೂರು , ಚಾಮರಾಜನಗರ , ಕೊಡಗು , ಹಾಸನ , ಮಂಡ್ಯ ಜಿಲ್ಲೆಗಳ ಮುಖಂಡರ ಜೊತೆ ಮಾತುಕತೆ ನಡೆಸಲಿದ್ದಾರೆ . ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ , ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಅಂದಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ .
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ದೃಷ್ಟಿಯಿಂದ ಮೈಸೂರಿನಲ್ಲಿ ವಿವಿಧ ಜಿಲ್ಲೆಗಳ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದರು . ಕಾಂಗ್ರೆಸ್ ತೊರೆದಿರುವವರು ಮರಳಿ ಪಕ್ಷಕ್ಕೆ ಬಂದರೆ ಏಕಾಏಕಿ ಸೇರ್ಪಡೆ ಮಾಡಿಕೊಳ್ಳುವುದಿಲ್ಲ . ಈ ಬಗ್ಗೆ – ಪರಿಶೀಲಿಸಲು ಅಲ್ಲಂ ವೀರಭದ್ರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ . ಆ ಸಮಿತಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ . ಈ ವಿಚಾರದಲ್ಲಿ ಬೇರೆಯವರು ಮಧ್ಯಪ್ರವೇಶಿಸಲು ಅವಕಾಶವಿಲ್ಲ .
ಅಲ್ಲಂ ವೀರಭದ್ರಪ್ಪ ನೇತೃತ್ವದ ಸಮಿತಿ ಕೈಗೊಳ್ಳುವ ತೀರ್ಮಾನವೇ ಅಂತಿಮ ಎಂದು ತಿಳಿಸಿದರು . ಹುಣಸೂರು ಶಾಸಕ ಹೆಚ್.ಪಿ.ಮಂಜುನಾಥ್ ಮಾತನಾಡಿ ಬಿ ಎಸ್ ಯಡಿಯೂರಪ್ಪ 4 ಬಾರಿ ಮುಖ್ಯಮಂತ್ರಿ ಆದರೂ ಹುಣಸೂರು ಕ್ಷೇತ್ರಕ್ಕೆ ಅವರ ಕೊಡುಗೆ ಶೂನ್ಯ ಎಂದು ಆರೋಪಿಸಿದರು . ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದ ನಾಲ್ಕು ಅವಧಿಯಲ್ಲೂ ಹುಣಸೂರು ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಿದರು . ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಯಡಿಯೂರಪ್ಪ ಮಾಡಿದಂತೆ ಮಾಡಬಾರದು . ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಆರಂಭಕ್ಕೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.