ಬೆಂಗಳೂರು: ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ ಅಂತ ಸೆಂಚುರಿ ಸ್ಟಾರ್ ಶಿವಣ್ಣ ಅವರು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವರಾಜಕುಮಾರ್ ಅವರು ಗೋಕಾಕ್ ಚಳುವಳಿಯಲ್ಲಿ ಸಂದರ್ಭದ ಅಣ್ಣಾವ್ರು ಫೋಟೋದೊಂದಿಗೆ ‘ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜೈ ಕರ್ನಾಟಕ’ ಅಂತ ಟ್ವೀಟ್ ಮಾಡಿ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದಾರೆ.
ಏನಿದು ಘಟನೆ..?
ಡಿಸೆಂಬರ್ 13 ರಂದು ಕನ್ನಡಪರ ಹೋರಾಟಗಾರರು ಎಂಇಎಸ್ ಮುಖಂಡ ದೀಪಕ್ ದಳವಿಗೆ ಘೇರಾವ್ ಹಾಕಿ ಮುಖಕ್ಕೆ ಮಸಿ ಬಳಿದಿದ್ದರು. ಇದನ್ನು ಖಂಡಿಸಿ ಎಂಇಎಸ್‌ನವರು ಪ್ರತಿಭಟನಾ ರ್‍ಯಾಲಿ ಮಾಡಿ ತಿಲಕ್‌ವಾಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ದೂರು ದಾಖಲಿಸಿದ್ದರು. ಪೊಲೀಸರು ಕನ್ನಡಪರ ಹೋರಾಟಗಾರ ಸಂಪತ್‌ಕುಮಾರ್ ಸೇರಿದಂತೆ ಇನ್ನಿಬ್ಬರನ್ನು ಬಂಧಿಸಿದ್ದಾರೆ. ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದಿದ್ದನ್ನು ಖಂಡಿಸಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಪ್ರತಿಭಟನೆ ನಡೆಸಿ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದಾರೆ.