ರಾಮನಗರ: ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ರೈತರ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಭೈರಮಂಗಲ ಗ್ರಾಮದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಇಂದು ರಾಜ್ಯದ 15 ಜಿಲ್ಲೆಗಳ ರೈತ ಮುಖಂಡರು ಹಾಗೂ ಹಲವು ಪ್ರಮುಖ ರೈತ ಹೋರಾಟಗಾರರು ಬೆಂಬಲ ಸೂಚಿಸಿ ಭಾಗವಹಿಸಿದ್ದಾರೆ.
ಬಿಡದಿಯಿಂದ ಭೈರಮಂಗಲದವರೆಗೆ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ರೈತರು ಮುಂದಾಗಿದ್ದರೂ, ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ರ್ಯಾಲಿ ನಡೆಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿರುವ ಬಿಡದಿ ಪೊಲೀಸರು, ಆದೇಶ ಉಲ್ಲಂಘಿಸಿ ರ್ಯಾಲಿ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ರೈತರಿಗೆ ನೋಟಿಸ್ ಜಾರಿಗೊಳಿಸಿರುವ ಪೊಲೀಸರು, ಪ್ರತಿಭಟನೆ ಶಾಂತಿಯುತವಾಗಿ ನಡೆಸುವಂತೆ ಸೂಚಿಸಿದ್ದಾರೆ. ಇನ್ನೊಂದೆಡೆ, ಟೌನ್ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ ಮುಂದುವರಿಸುವುದಾಗಿ ರೈತರು ಸ್ಪಷ್ಟಪಡಿಸಿದ್ದಾರೆ.