ಬೆಂಗಳೂರು: ರಾಹುಲ್ ಗಾಂಧಿ ಯವರ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಅಸ್ಸಾಂನಲ್ಲಿ ಸಾಗುತ್ತಿದ್ದಾಗ ಬಿಜೆಪಿ ಕಾರ್ಯಕರ್ತರು ಬಸ್ ಅಡ್ಡಗಟ್ಟಿ ದಾಳಿ ನಡೆಸಲು ಯತ್ನಿಸಿದರೆಂದು ಆರೋಪಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು.
ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ವಿಮ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಕಾರ್ಯಕರ್ತರು ಇಂದು ಬೆಳಗ್ಗೆ ಸ್ವಾತಂತ್ರ್ಯ ಉದ್ಯಾನವನದದಲ್ಲಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯ ನೇತೃತ್ವವನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಹಿಸಿದ್ದರು.
ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಸಂಸದರು, ಸಚಿವರುಗಳು, ಶಾಸಕರುಗಳು, ಕೆಪಿಸಿಸಿ ಪದಾಧಿಕಾರಿಗಳು, ಬಿಬಿಎಂಪಿ ಮಾಜಿ ಸದಸ್ಯರು, ಮುಂಚೂಣಿ ಘಟಕ ವಿಭಾಗಗಳ ಮುಖ್ಯಸ್ಥರು ಹಾಗೂ ಪಕ್ಷದ ಹಿರಿಯ ಮುಖಂಡರು ಭಾಗವಹಿಸಿದ್ದರು.
ಬಿಜೆಪಿಯವರಿಗೆ ರಾಹುಲ್ ಗಾಂಧಿಯವರ ಯಾತ್ರೆಯಿಂದ ಭಯ ಉಂಟಾಗಿದೆ ಅದಕ್ಕಾಗಿಯೇ ಯಾತ್ರೆಯನ್ನು ತಡೆಯಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಕಿಡಿ ಕಾರಿದರು. ದೇಶಾದ್ಯಂತ ರಾಹುಲ್ ಗಾಂಧಿ ಪರ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಯಲಿದೆ ಎಂದು ಹೇಳಿದರು.
ಸಚಿವರಾದ ಕೆ. ಜೆ ಜಾರ್ಜ್, ಕೃಷ್ಣಬೈರೇಗೌಡ, ಮುಖಂಡರಾದ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯದರ್ಶಿ ಸಲೀಂ ಅಹಮದ್ ಸೇರಿದಂತೆ ಬಹುತೇಕ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.